ಬೆಂಗಳೂರಿನಲ್ಲಿ ಭಾರಿ ಮಳೆ, ಕೆ.ಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಮಂಗಳವಾರ ರಾತ್ರಿಯಿಂದ ಬೆಂಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ನಗರದ ಹೃದಯಭಾಗದಲ್ಲಿರುವ ಕೆ.ಆರ್.ಮಾರ್ಕೆಟ್‌ನಲ್ಲಿ ಭಾರಿ ಅವಾಂತರಗಳು ಉಂಟಾಗಿವೆ. ಮಾರುಕಟ್ಟೆಯೊಳಗೆ ನೀರು ನುಗ್ಗಿದ್ದು, ವ್ಯಾಪಾರಿಗಳು ತಮ್ಮ ಸರಕುಗಳನ್ನು ರಕ್ಷಿಸಲು ಪರದಾಡಿದರು. ಮಳೆಯಿಂದಾಗಿ ಗ್ರಾಹಕರ ಸಂಖ್ಯೆ ಗಣನೀಯವಾಗಿ ಇಳಿಮುಖವಾಗಿದ್ದು, ವ್ಯಾಪಾರಿಗಳಿಗೆ ಪ್ರತಿನಿತ್ಯ ಸಾವಿರಾರು ರೂಪಾಯಿ ನಷ್ಟವಾಗುತ್ತಿದೆ. ಕೆ.ಆರ್.ಮಾರ್ಕೆಟ್ ಮಾತ್ರವಲ್ಲದೆ, ಶಾಂತಿನಗರ, ರಿಚ್ಮಂಡ್ ಸರ್ಕಲ್, ಕಾರ್ಪೊರೇಷನ್, ಮೆಜೆಸ್ಟಿಕ್, ಚಾಮರಾಜ್‌ಪೇಟೆ ಮತ್ತು ಮಲ್ಲೇಶ್ವರಂ ಸೇರಿದಂತೆ ಹಲವು ಪ್ರದೇಶಗಳಲ್ಲಿ ರಸ್ತೆಗಳು ಕೆರೆಯಂತಾಗಿವೆ. ವಾಹನ ಸಂಚಾರಕ್ಕೆ ಅಡ್ಡಿಯಾಗಿದ್ದು, ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಮಳೆಯ ನಡುವೆ, ಕೆ.ಆರ್.ಸರ್ಕಲ್ ಬಳಿ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಖಾಸಗಿ ಬಸ್‌ಗೆ ಡಿಕ್ಕಿ ಹೊಡೆದಿದ್ದು, ಚಾಲಕರ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ ಎಂದು ಆರೋಪಿಸಲಾಗಿದೆ. ಅದೃಷ್ಟವಶಾತ್, ಈ ಅಪಘಾತದಲ್ಲಿ ಯಾರಿಗೂ ಗಾಯಗಳಾಗಿಲ್ಲ.


