ಬಿಟ್ ಕಾಯಿನ್ ಹಗರಣ: ಶ್ರೀಕಿಗೆ ಜಾಮೀನು
ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ, ಹಣ ಅಕ್ರಮ ವರ್ಗಾವಣೆ ಆರೋಪದಡಿ ಬಂಧಿತರಾಗಿರುವ ಹ್ಯಾಕರ್ ಶ್ರೀಕೃಷ್ಣ ರಮೇಶ್ ಅಲಿಯಾಸ್ ಶ್ರೀಕಿ ಮತ್ತು ಕ್ರಿಪ್ಟೊ ಟ್ರೇಡರ್ ರಾಬಿನ್ ಖಂಡೇಲ್‌ವಾಲ ಅವರಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. 2026ರ ಮೇ 8ರಂದು ಬಂಧನಕ್ಕೆ ಒಳಗಾಗಿದ್ದ ಶ್ರೀಕಿ ಮತ್ತು ರಾಬಿನ್ ಖಂಡೇಲ್‌ವಾಲ ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳನ್ನು ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ಪುರಸ್ಕರಿಸಿತು. ಅರ್ಜಿದಾರರ ಪರ ಪದಾಂಕಿತ ಹಿರಿಯ ವಕೀಲ ಸಂದೇಶ್ ಜೆ.ಚೌಟ ಮತ್ತು ಹೈಕೋರ್ಟ್ ವಕೀಲ ಬಿಪಿನ್ ಹೆಗಡೆ ಅವರು, ‘ಅರ್ಜಿದಾರರಿಂದ ಏನನ್ನೂ ಜಪ್ತಿ ಮಾಡಲಾಗಿಲ್ಲ. ಜಾರಿ ನಿರ್ದೇಶನಾಲಯ (ಇ.ಡಿ) ಸಮನ್ಸ್ ನೀಡಿದಾಗಲೆಲ್ಲಾ ವಿಚಾರಣೆಗೆ ಹಾಜರಾಗಿ ಸಹಕರಿಸಿದ್ದಾರೆ. ಇ.ಡಿ ದೂರಿನ ಭಾಗವಾಗಿ ಇನ್ನೂ ಸಕ್ಷಮ ನ್ಯಾಯಾಲಯ ಸಂಜ್ಞೇಯ ಅಪರಾಧವನ್ನು ಪರಿಗಣಿಸಿಲ್ಲ. ಹೀಗಾಗಿ, ಜಾಮೀನು ಮಂಜೂರು ಮಾಡಬೇಕು’ ಎಂದು ಕೋರಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶಿಸಿತು.


