ವಿಚ್ಛೇದನ ಡಿಕ್ರಿ ಪಡೆದಿದ್ದಾರೆ ಎಂಬ ಕಾರಣಕ್ಕೆ ಕ್ರಿಮಿನಲ್ ಪ್ರಕರಣ ದಾಖಲಿಸಬಾರದು
ವಿಚ್ಛೇದನ ಡಿಕ್ರಿ ಪಡೆದಿದ್ದಾರೆ ಎಂಬ ಕಾರಣಕ್ಕೆ ಪತ್ನಿ ಮತ್ತು ಕುಟುಂಬಸ್ಥರ ವಿರುದ್ಧ ಹಲವು ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸುವ ಮೂಲಕ ಕಾನೂನು ವ್ಯವಸ್ಥೆಯನ್ನು ಸೇಡು ತೀರಿಸಿಕೊಳ್ಳುವ ಅಸ್ತ್ರವನ್ನಾಗಿ ಬಳಸಿಕೊಳ್ಳಲು ಅನುಮತಿ ನೀಡಲಾಗುವುದಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಕೌಟುಂಬಿಕ ನ್ಯಾಯಾಲಯ ಮಂಜೂರು ಮಾಡಿದ ವಿಚ್ಛೇದನ ಡಿಕ್ರಿಯನ್ನು ರದ್ದುಪಡಿಸಬೇಕು ಎಂದು ಕೋರಿ 31 ವರ್ಷದ ಪತಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ನ್ಯಾಯಮೂರ್ತಿ ಡಿ.ಕೆ.ಸಿಂಗ್ ಮತ್ತು ನ್ಯಾಯಮೂರ್ತಿ ಎಚ್.ಶಾಂತಿಭೂಷಣ್ ಅವರಿದ್ದ ದ್ವಿಸದಸ್ಯ ನ್ಯಾಯಪೀಠ ಆದೇಶಿಸಿದೆ. ಕೇವಲ ದ್ವೇಷ ಸಾಧನೆಗಾಗಿ ಪತ್ನಿ ಮತ್ತು ಅವರ ಕುಟುಂಬದ ವಿರುದ್ಧ ಹಲವು ಸುಳ್ಳು ಮೊಕದ್ದಮೆಗಳನ್ನು ದಾಖಲಿಸಿರುವ ಪತಿಯ ನಡೆ ಕ್ರೌರ್ಯಕ್ಕೆ ಸಾಕ್ಷಿಯಾಗಲಿದೆ ಎಂದು ಎಚ್ಚರಿಸಿದೆ. ಮುಂದಿನ ದಿನಗಳಲ್ಲಿ ಪತ್ನಿ ಅಥವಾ ಅವರ ಕುಟುಂಬದ ಸದಸ್ಯರ ವಿರುದ್ಧ ಯಾವುದೇ ಅನಗತ್ಯ ದೂರು ಅಥವಾ ಪ್ರಕರಣಗಳನ್ನು ದಾಖಲಿಸಿ ಅವರ ಜೀವನದಲ್ಲಿ ಹಸ್ತಕ್ಷೇಪ ಮಾಡಬಾರದು ಎಂದು ನಿರ್ಬಂಧ ಹೇರಿ ಆದೇಶಿಸಿದೆ.


