ಫ್ರೀಡಂ ಪಾರ್ಕ್‌ನಲ್ಲಿ ಸಿಜೆಪಿ ಪ್ರತಿಭಟನೆ: ಪ್ರಕಾಶ್ ರಾಜ್, 'ಜ್ಞಾನೇಶ್ ಹೋದರೆ ಅಜ್ಞಾನೇಶ್ ಬರುತ್ತಾನೆ'; ಮೊದಲು SIR ರದ್ದುಗೊಳಿಸಿ
ವಿವಾದಿತ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ರದ್ದುಗೊಳಿಸುವಂತೆ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ (CJP) ನೇತೃತ್ವದಲ್ಲಿ ಭಾರಿ ಪ್ರತಿಭಟನೆ ನಡೆಯಿತು. ಸೂಕ್ತ ಸೂಚನೆ ಅಥವಾ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡದೆಯೇ ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಈ ಪ್ರತಿಭಟನೆಯಲ್ಲಿ ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ, ವಕ್ತಾರ ಸೌರವ್ ದಾಸ್, ನಟ ಪ್ರಕಾಶ್ ರಾಜ್, ಯೂಟ್ಯೂಬರ್ ಧ್ರುವ್ ರಾಠೀ ಮತ್ತು ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ವಿ. ಗೋಪಾಲ ಗೌಡ ಅವರು ಭಾಗವಹಿಸಿದ್ದರು. ಅಭಿಜಿತ್ ದೀಪ್ಕೆ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಚುನಾವಣಾ ಆಯೋಗವು 'ಪ್ರಜಾಪ್ರಭುತ್ವದ ಹತ್ಯೆ' ಮತ್ತು 'ಮತ ಕಳ್ಳತನ' ನಡೆಸುತ್ತಿದ್ದಾರೆ ಎಂದು ಆರೋಪಿಸಿದರು. ಪ್ರಕಾಶ್ ರಾಜ್ ಅವರು SIR ಪ್ರಕ್ರಿಯೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿ, 'ಈ ಜ್ಞಾನೇಶ್ ಹೋದರೆ ಮತ್ತೊಬ್ಬ ಅಜ್ಞಾನೇಶ್ ಬರುತ್ತಾನೆ' ಎಂದು ವಾಗ್ದಾಳಿ ನಡೆಸಿದರು.


