ಪುಲಿಕೇಶಿನಗರ ಸ್ಫೋಟ ಪ್ರಕರಣದಲ್ಲಿ ಸಂಶಯದ ವ್ಯಕ್ತಿ ವಶಕ್ಕೆ
ಪುಲಿಕೇಶಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜರ್ಮಿಯಾ ರಸ್ತೆಯಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಸಂಭವಿಸಿದ್ದ ಸ್ಫೋಟ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಪೂರ್ವ ವಿಭಾಗದ ಪೊಲೀಸರು, ಶಂಕಿತ ವ್ಯಕ್ತಿಯನ್ನು ರಾಯಚೂರು ಜಿಲ್ಲೆಯ ಮಸ್ಕಿಯಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ. ತಾಂತ್ರಿಕ ಸಾಕ್ಷ್ಯಗಳನ್ನು ಆಧರಿಸಿ ಜಲಾಲ್ ಎಂಬ ಯುವಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು. ಕಾವಲುಗಾರ ಅಲ್ಲಾವುದ್ದೀನ್‌ಗೆ ಬ್ಯಾಗ್ ತಂದುಕೊಟ್ಟಿರುವ ಶಂಕೆಯ ಮೇಲೆ ವಶಕ್ಕೆ ಪಡೆಯಲಾಗಿದೆ. ಪ್ರಕರಣದಲ್ಲಿ ಜಲಾಲ್ ಪಾತ್ರ ಏನು ಎಂಬುದನ್ನು ಪತ್ತೆ ಮಾಡಲಾಗುತ್ತಿದೆ ಎಂದು ತನಿಖಾಧಿಕಾರಿಯೊಬ್ಬರು ಹೇಳಿದರು. ನಿರ್ಮಾಣ ಹಂತದ ಕಟ್ಟಡದ ನಾಲ್ಕನೇ ಮಹಡಿಯಲ್ಲಿ ಅ.20ರಂದು ಸ್ಫೋಟ ಸಂಭವಿಸಿತ್ತು. ಸ್ಫೋಟದ ತೀವ್ರತೆಗೆ ಕಟ್ಟಡದ ಕಾವಲುಗಾರ ಅಲ್ಲಾವುದ್ದೀನ್ ಹಾಗೂ ಕಾರ್ಮಿಕ ಸೂರಜ್‌ನ ತಲೆ ಹಾಗೂ ಮುಖದ ಭಾಗಕ್ಕೆ ಗಾಯಗಳಾಗಿದ್ದವು. ತಕ್ಷಣವೇ ಅವರನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಗಿತ್ತು. ಸೂರಜ್ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ಅಧಿಕಾರಿಗಳು ಸಹ ಇದೇ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

